
ಬೆಂಗಳೂರು: ನಟಿ ರನ್ಯಾ ರಾವ್ ಅವರ ಮಲ ತಂದೆ ಮತ್ತು ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸೋಮವಾರ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸಲಾಗಿದೆ.
ಮಾರ್ಚ್ 15 ರಂದು ಕಡ್ಡಾಯ ರಜೆಯ ಮೇಲೆ ಕಳುಹಿಸಲಾದ ರಾವ್ ಅವರನ್ನು ಐಎಎಸ್ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.
ಮುಂದಿನ ಎರಡು ದಿನಗಳಲ್ಲಿ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸಮಿತಿಗೆ ಸೂಚಿಸಿತ್ತು. ಐಪಿಎಸ್ ಅಧಿಕಾರಿ ರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಮಾರ್ಚ್ 3 ರಂದು ದುಬೈನಿಂದ ಆಗಮಿಸಿದಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ರಾವ್ ಅವರಿಂದ 12.56 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಗಿತ್ತು.