ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ಐಟಿ ಅಧಿಕಾರಿಗಳು ಕೋರ್ಟ್ ಗೆ 2000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಎಸ್ಐಟಿ ತನಿಖಾಧಿಕಾರಿ ಸುಮಾರಾಣಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿಗೆ ವಹಿಸಿತ್ತು.