ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಪ್ರಕಟಿಸಿದ್ದಾರೆ.
ಕೊಪ್ಪಳದ ಮಂಜುನಾಥ ಬಾವಿಮನಿ ಎಂಬ ವ್ಯಕ್ತಿಯು 2020 ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ವಿವಿಧ ಆಮಿಷಗಳನ್ನು ತೋರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸಿದಂತೆ ಜೀವ ಬೆದರಿಕೆ ಹಾಕಿದ್ದ ಆರೋಪವು ತನಿಖೆಯಲ್ಲಿ ಸಾಬೀತಾದ್ದರಿಂದ ಆರೋಪಿತನ ವಿರುದ್ಧ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪಿಐ ಪ್ರಕಾಶ ಮಾಳೆ ಅವರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿದ್ದು, ದಂಡದ ಮೊತ್ತದಲ್ಲಿ 25 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.