ಬೆಂಗಳೂರು: ಸಂತಾನೋತ್ಪತ್ತಿ ಆಯ್ಕೆಯ ಹಕ್ಕು ಮಹಿಳೆಯರ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದೆ.
ದೈಹಿಕ ಸಮಗ್ರತೆಯನ್ನು ರಕ್ಷಿಸಿಕೊಳ್ಳುವ ಪವಿತ್ರ ಹಕ್ಕನ್ನು ಮಹಿಳೆಯರು ಹೊಂದಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿ ಗರ್ಭಿಣಿಯಾಗಿರುವ 24 ವಾರಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಗರ್ಭಪಾತ ಮಾಡಲು ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿ ನಿರಾಕರಿಸಿದ್ದರು. ವೈದ್ಯಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ 16 ವರ್ಷದ ಸಂತ್ರಸ್ತ ಬಾಲಕಿ ತನ್ನ ತಾಯಿಯ ಮೂಲಕ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರ ಪೀಠದಲ್ಲಿ ನಡೆದಿದ್ದು, ಸಂತಾನೋತ್ಪತ್ತಿ ಆಯ್ಕೆಯ ಹಕ್ಕು ಮಹಿಳೆಯರ ವೈಯಕ್ತಿಕ ಸ್ವಾತಂತ್ರ್ಯವಾಗಿದೆ. ದೇಹವನ್ನು ಕಾಪಾಡಿಕೊಳ್ಳುವ ಪವಿತ್ರ ಹಕ್ಕನ್ನು ಮಹಿಳೆಯರು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಗರ್ಭಪಾತಕ್ಕೆ ಅನುಮತಿ ನೀಡಿದೆ. ಅಲ್ಲದೆ, ಅನಪೇಕ್ಷಿತವಾಗಿ ದೇಹದ ಮೇಲಿನ ಹೇರಿಕೆಯನ್ನು ಸಹಿಸಿಕೊಳ್ಳುವಂತೆ ಮಾಡುವುದು ಸಂವಿಧಾನದ ಪರಿಚ್ಛೇದ 21 ರ ಅನ್ವಯ ನೀಡಲಾದ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟು, ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದೆ ಎನ್ನಲಾಗಿದೆ.