
ಯಾದಗಿರಿ: ಯಾದಗಿರಿ ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಪ್ರಭಾರ ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಶಾಲೆಗೆ ಖುದ್ದಾಗಿ ಭೇಟಿ ನೀಡಿ ವರದಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲನಾಗಿರುವ ವಿಜ್ಞಾನ ಶಿಕ್ಷಕ ನವೆಂಬರ್ 1 ರಂದು ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಲಾಗಿದೆ. ನೊಂದ ಬಾಲಕಿ ಅಧಿಕಾರಿಯೊಬ್ಬರಿಗೆ ದೂರು ಸಲ್ಲಿಸಿದ್ದು, ಆಕೆ ಶಾಲೆಗೆ ಬರುತ್ತಿಲ್ಲ ಎನ್ನಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.