ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಣ್ಣನೇ ತಂಗಿಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದು ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿರುವ ದಂಪತಿಯ ಪುತ್ರನಾಗಿರುವ ಆರೋಪಿಗೆ ಮೂವರು ಸಹೋದರಿಯರು ಇದ್ದಾರೆ. ಓದುವುದನ್ನು ಬಿಟ್ಟಿದ್ದ ಆರೋಪಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಕೊನೆಯ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಗೆ 15 ದಿನಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಸ್ಕ್ಯಾನಿಂಗ್ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.