ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರು ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಧ್ಯವರ್ತಿಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇನ್ನೂ ಮುಂದೆ ಹೀಗೆ ಮಧ್ಯವರ್ತಿಗಳಿಗೆ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬಡವರಿಗೆ ಜೀವನ ಮಾಡಲು ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಆದರೆ, ಅನ್ನ ಅಂತ್ಯೋದಯ ಪಡಿತರ ಚೀಟಿದಾರರು ಹಾಗೂ ಅದ್ಯತಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿಯನ್ನು ಪಡೆದುಕೊಂಡು ತಾವುಗಳು ಉಪಯೋಗಿಸದೆ ಹೆಚ್ಚಿನ ಲಾಭಕ್ಕೆ ಮಧ್ಯವರ್ತಿಗಳಿಗೆ ಮಾರಾಟ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಗ್ರಾಮೀಣ ಭಾಗದಲ್ಲಿ ಇನ್ನು ಮುಂದೆ ಮಧ್ಯವರ್ತಿಗಳಿಗೆ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡು ಬಂದರೆ ನ್ಯಾಯಬೆಲೆ ಅಂಗಡಿದಾರರು ಅಂತವರ ಪಡಿತರ ಚೀಟಿದಾರರ ವಿವರಗಳೊಂದಿಗೆ ಮಾಹಿತಿಯನ್ನು ಕಚೇರಿಗೆ ನೀಡಲು ಸೂಚಿಸಿದೆ. ಕಾನೂನಿಗೆ ವಿರುದ್ದವಾಗಿ ಕಾರ್ಡುದಾರರು ಮಧ್ಯವರ್ತಿಗಳಿಗೆ ಹೆಚ್ಚಿನ ಬೆಲೆಗೆ ಅಕ್ಕಿ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಅಂತವರ ವಿರುದ್ದ ಕಾನೂನಿನ ಅನ್ವಯ ಸೂಕ್ತ ಕ್ರಮ ಜರುಗಿಸಿ, ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.