ಬೆಂಗಳೂರು: ಮುಂದಿನ ತಿಂಗಳಿಂದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪಡಿತರ ಅಕ್ಕಿ ವಿತರಣೆ ಪ್ರಮಾಣವನ್ನು ಹಾಲಿ 5 ಕೆಜಿಯಿಂದ ಮತ್ತೆ 10 ಕೆಜಿಗೆ ಹೆಚ್ಚಳ ಮಾಡಲಾಗುವುದು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಿದ್ದು, ಮುಂದಿನ ತಿಂಗಳಿಂದಲೇ 10 ಕೆಜಿ ಪಡಿತರ ಅಕ್ಕಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಅಕ್ಕಿ ಸ್ಥಗಿತವಾದ ಹಿನ್ನೆಲೆಯಲ್ಲಿ ಪಡಿತರ ಅಕ್ಕಿ ವಿತರಣೆ ಪ್ರಮಾಣ ಕಡಿಮೆಯಾಗಿದ್ದು, ಪುನಃ 10 ಕೆಜಿ ಅಕ್ಕಿ ನೀಡಲು ಸಿಎಂ ಜೊತೆಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.