ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು 2025-26ನೇ ಸಾಲಿನ 6 ರಿಂದ 9ನೇ ತರಗತಿಗಳ ಉಚಿತ ಶಿಕ್ಷಣಕ್ಕಾಗಿ ನಡೆಸಿದ ಪ್ರವೇಶ ಪರೀಕ್ಷೆಗೆ ರಾಜ್ಯಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರ ನಡೆದ ಪರೀಕ್ಷೆಗೆ ವಿವಿಧ ಜಿಲ್ಲೆಗಳಿಂದ ಒಟ್ಟು 18,634 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 20,134 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.
ಕಲಿಕಾ ಸಾಮರ್ಥ್ಯ, ಭಾಷಾ ಸಾಮರ್ಥ್ಯ ಮತ್ತು ಆಳ್ವಾಸ್ ವ್ಯವಸ್ಥೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಾಲಕರ ಮಕ್ಕಳು, ತಂದೆ-ತಾಯಿಯನ್ನು ಕಳೆದುಕೊಂಡವರು ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಆಳ್ವಾಸ್ ಸಂಸ್ಥೆ ತಿಳಿಸಿದೆ.
ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಬಾರಿ ಪ್ರಥಮ ಬಾರಿಗೆ ಆನ್ಲೈನ್ನಲ್ಲಿ ಅರ್ಜಿ ನಮೂನೆಯನ್ನು ಕ್ಯೂಆರ್ ಕೋಡ್ನೊಂದಿಗೆ ಒದಗಿಸಲಾಗಿತ್ತು. “ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 640 ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ. ಪ್ರತಿಷ್ಠಾನವು ಪ್ರತಿ ವಿದ್ಯಾರ್ಥಿಗೆ ವಾರ್ಷಿಕವಾಗಿ 1.30 ಲಕ್ಷದಂತೆ ಒಟ್ಟು 8 ಕೋಟಿ ರೂ. ವಿನಿಯೋಗಿಸುತ್ತಿದೆ” ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ತಿಳಿಸಿದ್ದಾರೆ.