ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ 1041 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 27ರ ಭಾನುವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ರಾಜ್ಯಾದ್ಯಂತ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಬಿಗಿ ಭದ್ರತೆ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಮೀಸಲು ಪೊಲೀಸರನ್ನು ಕೂಡ ಬಳಸಿಕೊಳ್ಳಬೇಕು. ಪರೀಕ್ಷಾ ಅಕ್ರಮ ಮತ್ತು ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದೆ. ಇಂತಹ ಕ್ರಮಗಳು ಮರುಕಳಿಸಬಾರದು. ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳನ್ನು ಸೂಕ್ಷ್ಮ ಜಿಲ್ಲೆಗಳೆಂದು ಗುರುತಿಸಲಾಗಿದ್ದು, ಈ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆಗಳು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗುವ ಮಾರ್ಗ ಮಧ್ಯೆ ಸೋರಿಕೆಯಾದ ಹಲವು ಪ್ರಕರಣಗಳಿದ್ದು, ಈ ಬಗ್ಗೆಯೂ ಎಚ್ಚರಿಕೆ ವಹಿಸಬೇಕೆಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.