ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಮೀಸಲಾತಿ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಒಟ್ಟು 845 ಹುದ್ದೆಗಳ ನೇಮಕಾತಿಗೆ ಅ. 7ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಬೇಕಿತ್ತು. ಗ್ರೂಪ್ ಎ, ಬಿ, ಸಿ, ಮತ್ತು ಡಿ ವೃಂದದ ಹುದ್ದೆಗಳಲ್ಲಿ ಕ್ರೀಡಾ ಸಾಧಕರಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಸೆ. 18ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಹೀಗಾಗಿ ಕೃಷಿ ಅಧಿಕಾರಿ ಹುದ್ದೆಗಳಿಗೆ ಮೀಸಲಾತಿ ಅಳವಡಿಸಬೇಕಿರುವ ಕಾರಣ ಅ. 7ರಿಂದ ಆರಂಭವಾಗಬೇಕಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.