ಬೆಂಗಳೂರು: ಖಾಲಿ ಇರುವ 2000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಕೃಷಿ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಒಪ್ಪಿದಲ್ಲಿ ಮೊದಲ ಹಂತದಲ್ಲಿ 1000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಗೆ ಮಂಜೂರಾದ ಹುದ್ದೆಗಳ ಪೈಕಿ ಶೇಕಡ 57ರಷ್ಟು ಹುದ್ದೆಗಳು ಖಾಲಿ ಇವೆ. ಗ್ರಾಮೀಣ ಮಟ್ಟದಲ್ಲಿ ಕೃಷಿ ಇಲಾಖೆ ಕಾರ್ಯನಿರ್ವಹಣೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಇದನ್ನು ನೀಗಿಸುವ ಸಲುವಾಗಿ 2000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಸಹಾಯಕ ಕೃಷಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ, ಹೋಬಳಿ, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಇಲ್ಲದಂತಾಗಿದ್ದು, ಆರ್ಥಿಕ ಇಲಾಖೆ ಒಪ್ಪಿದಲ್ಲಿ ಮೊದಲ ಹಂತದಲ್ಲಿ ಒಂದು ಸಾವಿರ ಸಹಾಯಕ ಕೃಷಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಇಲಾಖೆ ಕಾರ್ಯ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಕೃಷಿ ಇಲಾಖೆಯ ಹಿರಿಯ ಸಿಬ್ಬಂದಿ, ಅಧಿಕಾರಿಗಳು ಮುಂಬಡ್ತಿಗಾಗಿ ಮನವಿ ಸಲ್ಲಿಸಿದ್ದು, ಅದನ್ನು ಈಡೇರಿಸಲಾಗಿದೆ ರಾಜ್ಯ ಬೀಜ ನಿಗಮಕ್ಕೆ ಕಿರಿಯ ಸಹಾಯಕರು, ಸಹಾಯಕ ವ್ಯವಸ್ಥಾಪಕರು, ಬೀಜ ಸಹಾಯಕರು ಸೇರಿದಂತೆ 32 ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ.