ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಖಾಲಿ ಇರುವ 1000 ಅಬಕಾರಿ ಪೇದೆ, 100 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಬಕಾರಿ ಇಲಾಖೆಯಿಂದ ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದ ಬೊಕ್ಕಸಕ್ಕೆ ಹೆಚ್ಚು ಆದಾಯ ತರುವ ಅಬಕಾರಿ ಇಲಾಖೆಯ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದರು.
ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಅನುಮೋದನೆ ನೀಡಲಿದ್ದು, ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆಯಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ,
ಸಣ್ಣಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಮದ್ಯದ ದರ ಪರಿಷ್ಕರಣೆ ವಿಚಾರ ಸರ್ಕಾರದ ಮುಂದಿಲ್ಲ. ನಿರೀಕ್ಷೆಗೂ ಮೀರಿ ಆದಾಯ ಸಂಗ್ರಹವಾಗಿದೆ ಎಂದು ಹೇಳಿದ್ದಾರೆ.