ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನೀತಿ ಸಂಹಿತೆ ಮುಗಿಯುತಿದ್ದಂತೆ ಶಿಕ್ಷಣ ಇಲಾಖೆಯ ಖಾಲಿ ಹುದ್ದೆಗಳು ಭರ್ತಿಗೆ ಮುಖ್ಯಮಂತ್ರಿಗಳು ಆಸಕ್ತಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲಾ, ಕಾಲೇಜುಗಳನ್ನು ಸಶಕ್ತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆಗಳಿಗೆ ಸಿಬ್ಬಂದಿ ಸೇರಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. 600 ಶಾಲೆಗಳ ದುರಸ್ತಿಗೆ ಅನುದಾನ ನೀಡಲಾಗಿದೆ. ಶಾಲಾ ಕಟ್ಟಡಗಳ ದುರಸ್ತಿಗೆ ಆದ್ಯತೆ ನೀಡಲಾಗಿದೆ. 3000 ಕೆಪಿಎಸ್ ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭವಾದ ಕೂಡಲೇ ಮಕ್ಕಳಿಗೆ ಪಠ್ಯಪುಸ್ತಕ ಸಮವಸ್ತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.