ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಶೇಕಡ 50 ರಷ್ಟು ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಅರುಣ ಶಹಾಪುರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ವಿಶ್ವವಿದ್ಯಾಲಯಗಳಿಗೆ ಪ್ರಸ್ತುತ ಮಂಜೂರಾದ 6342 ಹುದ್ದೆಗಳ ಪೈಕಿ 3484 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಶೇಕಡ 50 ರಷ್ಟು ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ 2215 ಹುದ್ದೆಗಳಲ್ಲಿ 233 ಬೋಧಕರು, 997 ಬೋಧಕೇತರ ಹುದ್ದೆಗಳು ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ 1669 ಹುದ್ದೆಗಳಲ್ಲಿ 229 ಬೋಧಕರು ಮತ್ತು 655 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ 4 ಕೃಷಿ ವಿಶ್ವವಿದ್ಯಾಲಯಗಳಿಗೆ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿಲ್ಲ. ಶೀಘ್ರವೇ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.