ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ 300 ಸರ್ವೆಯರ್ ಹುದ್ದೆ ನೇಮಕಾತಿಗೆ ಮಂಜೂರಾತಿ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ. 43 ತಾಲೂಕು ಮಟ್ಟದ ಎ.ಡಿ.ಎಲ್.ಆರ್. ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. 1000 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆರ್.ಟಿ.ಸಿ. ಆಧಾರದಲ್ಲಿ ಜಮೀನು ನೋಂದಣಿ ರದ್ದು ಪಡಿಸಲಾಗುವುದು. ಭೂ ಪರಿವರ್ತನೆ ಮಾಡದೆ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಮಾಡಿ ಮಾರಾಟ ಮಾಡುತ್ತಾರೆ. ನಂತರ ಅದನ್ನು ಖರೀದಿಸುವವರು ಮತ್ತೊಬ್ಬರಿಗೆ ಮಾರಾಟ ಮಾಡುವಾಗ ತೊಂದರೆ ಎದುರಿಸಬೇಕಾಗುತ್ತದೆ. ಇಂತಹ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.