ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ 1,250 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿದ್ದು, 5000 ಹುದ್ದೆಗಳು ಭರ್ತಿಯಾಗಿದ್ದು, 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರಸ್ತುತ ಇರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳಲು ಇನ್ನು 8000 ಹೆಚ್ಚುವರಿ ಹುದ್ದೆಗಳು ಮಂಜೂರಾಗಬೇಕಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರಾಂಶುಪಾಲರ ನೇಮಕಾತಿಗೂ ಕ್ರಮ ಕೈಗೊಂಡಿದ್ದು, 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.