ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯತ್ವ ಎಸ್.ವಿ. ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಹುದ್ದೆ ಭರ್ತಿ ಮಾಡಲು 14 ಜಿಲ್ಲೆಗಳಿಗೆ ಅನುಮತಿ ನೀಡಿರುವುದಾಗಿ ತಿಳಿಸಿದರು.
ಉಳಿದ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರ ಖಾಲಿ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಮಂಜೂರಾದ ಹುದ್ದೆಗಳಲ್ಲಿ ಶೇಕಡ 30 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದರೆ ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಖಾಲಿ ಇರುವ ವಾಹನ ಚಾಲಕರು, ಬೆರಳಚ್ಚುಗಾರರು ಹಾಗೂ ಗ್ರೂಪ್-ಡಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.