ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಬಳಿಕ ಇತರ ರಾಜ್ಯಗಳಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಕರ್ನಾಟಕದಲ್ಲಿಯೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಆಗ್ರಹಿಸಲಾಗುತ್ತಿದೆ.
ಇದರ ಮಧ್ಯೆ ಜಾತಿ ಗಣತಿ ವರದಿ ಬಿಡುಗಡೆ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದು, ಈ ವಿಚಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರದಂತೆ ರಾಜ್ಯ ಸರ್ಕಾರ ಕೂಡ ನಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಬುಧವಾರದಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿಗಣತಿ ಮಾಡಿಸಿತ್ತು. ಇದೀಗ ಈ ವರದಿ ಬಿಡುಗಡೆ ಕುರಿತಂತೆ ಎಐಸಿಸಿ ಮಟ್ಟದಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೋ ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಲಿದೆ ಎಂದಿದ್ದಾರೆ.