ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಕೆ ಮಾಡಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು, ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ.
ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಸ್ವೀಕರಿಸಲಾಗಿರುವ ಮನವಿಗಳನ್ನು ಪರಿಶೀಲಿಸಿದ್ದು, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ, ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ(One time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.
ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ: 474/2024 ದಿನಾಂಕ:05.09.2024ರಲ್ಲಿನ ನಿರ್ಣಯದಂತೆ ಹೊರಡಿಸಿದೆ.