ಬೆಂಗಳೂರು: ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಅವರು ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ತಾಯಿ ಸೇರಿದಂತೆ ಸುಮಾರು 20 ಸಾವಿರ ಮಂದಿಯನ್ನು ಮತಾಂತರ ಮಾಡಲಾಗಿದೆ ಎಂದು ಅಧಿವೇಶನದಲ್ಲಿ ಹೇಳಿದ್ದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದಾದ ನಂತರದಲ್ಲಿ ಕ್ರಿಶ್ಚಿಯನ್ ಧರ್ಮಗುರುಗಳು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮತಾಂತರ ನಿಷೇಧ ಕಾಯ್ದೆ ಕುರಿತಾಗಿ ಚರ್ಚೆ ನಡೆಸಿದ್ದರು.