ದಾವಣಗೆರೆ: ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, 9 ತಿಂಗಳಾದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗಿಲ್ಲ. ಹಿಂದೆ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ಈಗ ಕಾಂಗ್ರೆಸ್ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ಆರೋಪ ಬಂದಿರುವುದರಿಂದ ಎಲ್ಲಾ ಹೊಣೆ ಹೊತ್ತು ರಾಜೀನಾಮೆ ನೀಡಲಿ. ಗುತ್ತಿಗೆದಾರರು 40% ಕಮಿಷನ್ ಬಗ್ಗೆ ಗಂಭೀರ ಆರೋಪ ಮಾಡಿದ್ದರೂ ಸ್ಪಷ್ಟವಾದ ಉತ್ತರ ಕೊಡುತ್ತಿಲ್ಲ ಎಂದು ಟೀಕಿಸಿದ್ದಾರೆ.
ಸರ್ಕಾರದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಕಾಂಗ್ರೆಸ್ ನವರು ನೀಡಿದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್ ಆಗಿವೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಛಿದ್ರ ಛಿದ್ರವಾಗುತ್ತದೆ. 28 ಕ್ಷೇತ್ರಗಳಲ್ಲಿ ನಿಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ ಎಂದು ಹೇಳಿದ್ದಾರೆ.