ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೊಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ದರ್ಶನ್ ಗೆಳತಿ ಬಗ್ಗೆ ರೇಣುಕಾಸ್ವಾಮಿ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ. ಹಾಗೆ ಮಾಡಿದ್ದರೆ ದೂರು ನೀಡಬಹುದಿತ್ತು. ಪೊಲೀಸರು ಕ್ರಮ ಕೈಗೊಳ್ಳಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು ಎಂದು ಹೇಳಿದರು.
ಇನ್ನು ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲಾ ಪ್ರಕರಣವನ್ನು ಸಿಬಿಐಗೆ ನೀಡಲು ಆಗಲ್ಲ. ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಲ್ಲ ಎಂದರು.