ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಭಾರತ ತಂಡಕ್ಕೆ ಸರ್ಜರಿ ಮಾಡಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ. ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ನಿರ್ದೇಶಕರನ್ನಾಗಿ ಮಾಡಲು ಈಗಾಗಲೇ ತೀರ್ಮಾನಿಸಲಾಗಿದ್ದು ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.
ಹಾರ್ದಿಕ್ ಪಾಂಡ್ಯ ಅವರನ್ನು ಟಿ ಟ್ವೆಂಟಿ ತಂಡದ ನೂತನ ನಾಯಕನನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದ್ದು, ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನವೇ ಅವರು ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.
ರೋಹಿತ್ ಶರ್ಮಾ ಟಿ20 ನಾಯಕತ್ವ ತೊರೆದು 2023ರ ವಿಶ್ವಕಪ್ ವರೆಗೆ ಏಕದಿನ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ, ನಿರ್ದೇಶಕರಾಗಿ ನೇಮಕವಾದರೆ ದ್ರಾವಿಡ್ ಅವರ ಮೇಲಿನ ಹೊರೆಯೂ ಕಡಿಮೆಯಾಗಲಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.