ಬೆಂಗಳೂರು : ತಂಬಾಕು ಉತ್ಪನ್ನಗಳ ಮೇಲಿನ ಜಿಎಸ್ಟಿ ಹೆಚ್ಚಳ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ ಆ್ಯಂಡ್ ಎಕಾನಾಮಿಕ್ ಚೇಂಜ್ (ಐಎಸ್ಇಸಿ) ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ʻತಂಬಾಕು ತೆರಿಗೆಗಳು; ಆರೋಗ್ಯ ಮತ್ತು ಆರ್ಥಿಕ ಲಾಭಗಳಿಗಾಗಿ ಒಂದು ಸಾಧನʼ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಜನಸಾಮಾನ್ಯರ ಆರೋಗ್ಯ ರಕ್ಷಣೆಯ ದೃಷ್ಟಿಕೋನದಿಂದ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಬಳಕೆಯ ಪ್ರಮಾಣವನ್ನು ತಗ್ಗಿಸಬಹುದು. ತಂಬಾಕು ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಹೆಚ್ಚಳ ಮಾಡುವಂತೆ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡಲಾಗುವುದು. ತಂಬಾಕು ಬಳಕೆಯು ಜನಸಾಮಾನ್ಯರ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ನಿರಂತರವಾಗಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.