ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಾರದೊಳಗೆ ಸರ್ವ ಪಕ್ಷ ಸಭೆ ಕರೆಯಲಾಗುವುದು.
ವಿಧಾನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ವಾರದೊಳಗೆ ಸರ್ವ ಪಕ್ಷದ ಸಭೆ ಕರೆಯಲಾಗುವುದು ಎಂದು ಹೇಳಿದ್ದಾರೆ.
ನ್ಯಾ. ನಾಗಮೋಹನ್ ದಾಸ್ ಸಮಿತಿ ಮತ್ತು ಮಾಜಿ ಉಪಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಸಮಿತಿ ವರದಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದು, ಇವು ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕ ವಿಚಾರಗಳಾಗಿರುವುದರಿಂದ ಸರ್ವ ಪಕ್ಷ ಸಭೆ ಕರೆದು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡಲಾಗುವುದು. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದರು.
ವಾರದೊಳಗೆ ಸಭೆ ನಡೆಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.