ದಾವಣಗೆರೆ: ಮೀಸಲು ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರ ಸಮೀಪದ ಬೆಳ್ಳೂಡಿ ಕಾಗಿನೆಲೆ ಕನಕಗುರು ಪೀಠದ 5 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಮೀಸಲಾತಿ ಪ್ರಮಾಣವನ್ನು ಶೇಕಡ 50 ರಷ್ಟು ಮಿತಿ ಹೆಚ್ಚಳಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಗೆ ಈ ಕುರಿತು ಮನವಿ ಮಾಡಲಾಗಿದೆ. ಹಾಲು ಮತ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡಲು ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಇದಕ್ಕಾಗಿ ಸಮಿತಿ ರಚಿಸಿದ್ದು, ಸಮಿತಿ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹೊಸದುರ್ಗ ಕನಕ ಗುರುಪೀಠದ ಶಾಖಾಮಠದಲ್ಲಿ ಕನಕದಾಸರ ಪುತ್ಥಳಿ ಪ್ರತಿಷ್ಠಾಪನೆಗೆ 5 ಕೋಟಿ ರೂ. ಅನುದಾನ ಮಂಜೂರು ಮಾಡುವುದಾಗಿ ತಿಳಿಸಿದ್ದು, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳಿಗೆ ಹಂತ ಹಂತವಾಗಿ 30 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.