ಬೆಂಗಳೂರು: ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, 50 ವರ್ಷದೊಳಗಿನವರಿಗೆ ಶೇಕಡ 50 ರಷ್ಟು ಟಿಕೆಟ್ ನೀಡಲಾಗುವುದು. ಟಿಕೆಟ್ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಟಿಕೆಟ್ ನೀಡಲಾಗುತ್ತದೆ. ಜೆಡಿಎಸ್, ಬಿಜೆಪಿಯೊಂದಿಗೆ ಸಮಾನ ಅಂತರ ಕಾಯ್ದುಕೊಳ್ಳಲಾಗುತ್ತದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು.
ನವ ಸಂಕಲ್ಪ ಶಿಬಿರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ತೀರ್ಮಾನಿಸಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ. ಎಲ್ಲಾ ಚುನಾವಣೆಗಳಲ್ಲಿಯೂ ಶೇಕಡ 50 ರಷ್ಟು ಟಿಕೆಟ್ ಗಳನ್ನು 50 ವರ್ಷದೊಳಗಿನವರಿಗೆ ನೀಡಲಾಗುವುದು. ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.