ಬೆಂಗಳೂರು: ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.
ಪ್ರತಿದಿನ ಐದು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದು, ಅವರು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಾಣಂತಿಯರ ಸಾವಿನ ಸಂಬಂಧ ಒಬ್ಬರನ್ನೂ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಅವರು ಕೂಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬಾಣಂತಿಯರ ಸಾವನ್ನು ಸರ್ಕಾರದ ತಡೆಯದಿರುವುದನ್ನು ಖಂಡಿಸಿ ಇಡೀ ರಾಜ್ಯದಲ್ಲಿ ಪ್ರತಿದಿನ ಐದು ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ ನಡೆಸಲಾಗುವುದು. ಮೃತ ಪ್ರತಿ ಬಾಣಂತಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಅವರ ಮಕ್ಕಳನ್ನು ದತ್ತು ಸ್ವೀಕರಿಸಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.