ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀ ಬಿ.ವೀರಪ್ಪ ಅವರು ಇಂದು ರಾಜಭವನದಲ್ಲಿ ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಮತ್ತೆ ಲೋಕಾಯುಕ್ತಕ್ಕೆ ನೀಡಿದ್ದ ಹೈಕೋರ್ಟ್ ಪೀಠದ ನೇತೃತ್ವ ವಹಿಸಿದ್ದರು. ಅಲ್ಲದೇ, ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರ್ಕಾರ ಕ್ರಮದಲ್ಲಿ ನ್ಯಾಯಮೂರ್ತಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು. ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.