ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಹೈದರಾಬಾದ್ ನ ಗಚ್ಚಿಬೌಲಿ ಬಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸಿಎಲ್ ಪಿ ಸಭೆ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೂಡ ಮಾಹಿತಿ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ಬಗ್ಗೆ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಲಿದೆ.
ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ಎಸ್ (ಭಾರತ್ ರಾಷ್ಟ್ರ ಸಮಿತಿ)ನ್ನು ಸೋಲಿಸಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿದೆ. ಕಳೆದ ಎರಡು ಅವಧಿಗೆ ಆಡಳಿತ ನಡೆಸಿದ ಕೆಸಿಆರ್ ನೇತೃತ್ವದ ಬಿಆರ್ಎಸ್ ಪಕ್ಷ ಈ ಬಾರಿ ಅಧಿಕಾರವನ್ನು ಕಳೆದುಕೊಂಡಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.