
ಕೊಲ್ಕತ್ತಾ: ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಶವ ಪತ್ತೆಯಾಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.
ಶುಕ್ರವಾರ ಬೆಳಗ್ಗೆ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 4ನೇ ಮಹಡಿಯಲ್ಲಿ ಅನುಮಾನಾಸ್ಪದವಾಗಿ ಕಿರಿಯ ಮಹಿಳಾ ವೈದ್ಯೆ ಶವ ಪತ್ತೆಯಾಗಿದೆ. ಅರೆನಗ್ನ ಸ್ಥಿತಿಯಲ್ಲಿ ವೈದ್ಯೆ ಶವ ಪತ್ತೆಯಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು, ವೈದ್ಯರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಮೊದಲಿಗೆ ಆಡಳಿತ ಮಂಡಳಿಯವರು ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹೇಳಿದ್ದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ. ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಕೂಡ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರ್.ಜಿ. ಕರ್ ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.
ಕೊಲೆಯಾದ ಕಿರಿಯ ವೈದ್ಯೆ ಗುರುವಾರ ರಾತ್ರಿ ಕರ್ತವ್ಯದಲ್ಲಿ ಇದ್ದರು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ವೈದ್ಯಕೀಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ರಾತ್ರಿ ಕರ್ತವ್ಯದ ವೇಳೆ ಶವವಾಗಿ ಪತ್ತೆಯಾದ ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಶನಿವಾರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಸ್ಥಳದಲ್ಲಿ ಬ್ಲೂಟೂತ್ ಇಯರ್‌ಫೋನ್‌ನ ತುಂಡಾಗಿದ್ದ ಭಾಗವನ್ನು ವಶಪಡಿಸಿಕೊಂಡ ನಂತರ ಆತನನ್ನು ಬಂಧಿಸಲಾಯಿತು. ಆತನ ಚಟುವಟಿಕೆಗಳು ಅನುಮಾನಾಸ್ಪದವಾಗಿದೆ. ನೇರವಾಗಿ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.