ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಮತ್ತೆ ಅರಾಜಕತೆ ಸೃಷ್ಟಿಯಾಗಿದ್ದು, ಅಧ್ಯಕ್ಷ ರಾಜಪಕ್ಸೆ ವಿರುದ್ಧ ಜನರು ಪ್ರತಿಭಟನೆ ನಡೆಸಿದ್ದಾರೆ.
ಬೆಲೆ ಏರಿಕೆ, ಆರ್ಥಿಕ ಸಂಕಷ್ಟದಿಂದ ಕಂಗಾಲಾದ ಜನರು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಕೊಲಂಬೊದಲ್ಲಿರುವ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಲಕ್ಷಾಂತರ ಜನ ಪ್ರತಿಭಟನಾಕಾರರು ರಾಜಪಕ್ಸೆ ಕುಟುಂಬದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕುತ್ತಿದ್ದಂತೆ ಪಲಾಯನಗೈದಿರುವ ಅಧ್ಯಕ್ಷ ರಾಜಪಕ್ಸೆ, ಸಮುದ್ರಯಾನದ ಮೂಲಕ ವಿದೇಶದತ್ತ ಸಾಗಿದ್ದಾರೆ ಎನ್ನಲಾಗುತ್ತಿದೆ.
ಅಧ್ಯಕ್ಷರ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿರುವ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.