ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 30 ಕೆಜಿ ಅಕ್ಕಿಯನ್ನು ಕೆಜಿಗೆ ಒಂದು ರೂ. ದರದಲ್ಲಿ ನೀಡಲಾಗುತ್ತಿತ್ತು. 2023ರ ವಿಧಾನಸಭೆ ಚುನಾವಣೆಗೆ ಮೊದಲು ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಿದ್ದರಾಮಯ್ಯ ಸರ್ಕಾರಕ್ಕೆ ಬಂದಿತ್ತು. ಆರಂಭದಲ್ಲಿ ಅಕ್ಕಿ ಸಿಗದ ಪರಿಣಾಮ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಪಡಿತರ ವಿತರಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ.
ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು 2025 ರ ಮಾರ್ಚ್ ವರೆಗೆ ವಿತರಿಸಲು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಆದರೂ, ಅಕ್ಕಿ ಖರೀದಿಸಲು ವಿಳಂಬ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಭಾರತೀಯ ಆಹಾರ ನಿಗಮ ಕಡಿಮೆ ದರದಲ್ಲಿ ಅಕ್ಕಿ ನೀಡಲು ಒಪ್ಪಿದ್ದರೂ ಸಂಪುಟ ಸಭೆಯಲ್ಲಿ ಅಕ್ಕಿ ಖರೀದಿಸುವ ನಿರ್ಣಯ ಕೈ ಬಿಡಲಾಗಿದೆ. ಅಕ್ಕಿ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯಬಾರದು. ಭರವಸೆಯಂತೆ 5 ಕೆಜಿ ಹೆಚ್ಚುವರಿ ಅಕ್ಕಿ ಕೊಡಬೇಕು ಎಂದು ಹೇಳಿದ್ದಾರೆ.