ಹಾಸನ : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಅಂತ್ಯಸಂಸ್ಕಾರದ ವೇಳೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಘಟನೆ ಸಂಬಂಧ ಯಸಳೂರು ಠಾಣೆಯಲ್ಲಿ 20 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಏನಿದು ಘಟನೆ
ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದರು. ಅರ್ಜುನ ಆನೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಜುನ ಆನೆ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜನರ ಮನವೊಲಿಕೆಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.. ಘಟನೆ ಸಂಬಂಧ ಯಸಳೂರು ಠಾಣೆಯಲ್ಲಿ 20 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.