ಬೆಂಗಳೂರು: ಸಾರ್ವಜನಿಕರ ರಸ್ತೆಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸುತ್ತ ಹೋದರೆ ಜನಸಾಮಾನ್ಯರು ಏನು ಮಾಡಬೇಕು ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರಿನ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಾಣ ಮಾಡಲಾಗಿದೆ ಎಂದು ಸುಂಕದಕಟ್ಟೆ ಗಜಾನನ ನಗರದ ಸಿ. ಹೊನ್ನಯ್ಯ ಸೇರಿ ನಾಲ್ವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ವಿಚಾರಣೆ ನಡೆಸಿ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದೆ. ವಿವಾದಿತ ಸ್ಥಳ ಸರ್ವೆ ನಡೆಸಿ ಮೂರು ವಾರಗಳಲ್ಲಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಬೆಂಗಳೂರು ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸುತ್ತಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ಇದ್ದ ರಸ್ತೆ ನಿರ್ಬಂಧಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.
ಆಗ ನ್ಯಾಯಪೀಠ, ಸಾರ್ವಜನಿಕರ ರಸ್ತೆ ಒತ್ತುವರಿ ಮಾಡಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನ ಏನು ಮಾಡಬೇಕು. ಇದನ್ನು ನ್ಯಾಯಪೀಠ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.