ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಾದೇಶಿಕ ಅಸಮತೋಲನ ನಿವಾರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 5000 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 371 ಜೆ ಸೇರ್ಪಡೆ ಮಾಡಿ 10 ವರ್ಷ ಪೂರ್ಣಗೊಂಡಿದೆ. ದಶಮಾನೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಾದೇಶಿಕ ಅಸಮತೋಲನ ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.