ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ.
ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 ಕೋಟಿ ರೂ ವೆಚ್ಚದಲ್ಲಿ 22 ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.
ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಸಂಭವಿಸುತ್ತಿರುವ ಅಪಘಾ ತಡೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 997 ಕೋಟಿ ರೂಪಾಯಿ ವೆಚ್ಚದಲ್ಲಿ 26 ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.
22 ಕಾಮಗಾರಿಗಳನ್ನು ನಡೆಸಲು ಸಚಿವಾಲಯ ಅನುಮೋದನೆ ನೀಡಿದೆ. ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ 2022 -23ರಲ್ಲಿ ಸಚಿವಾಲಯ 47 ಕೋಟಿ ರೂ. ಹಂಚಿಕೆ ಮಾಡಿದ್ದು, ಈಗ 784 ಕೋಟಿ ರೂ. ವೆಚ್ಚದಲ್ಲಿ 22 ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು.