ನವದೆಹಲಿ: ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಜೊತೆಗೆ ಆರ್ ಟಿಪಿಸಿಆರ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮಾನ್ಸುಖ್ ಮಾಂಡವೀಯ, ವಿದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಕಡ್ಡಾಯಗೊಳಿಸಲಾಗಿದೆ ಎಂದರು.
ಪ್ರಮುಖವಾಗಿ ಚೀನಾ, ಜಪಾನ್, ಹಾಂಕಾಂಗ್, ದಕ್ಷಿಣ ಕೊರಿಯಾ, ಥೈಲ್ಯಾಂಡ್ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಇದ್ದರೂ ಆರ್ ಟಿ ಪಿ ಸಿಆರ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು. ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೊನಾ ರೂಪಾಂತರಿ BF.7 ವೈರಸ್ ಹೆಚ್ಚಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿಯೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.