ಬೆಂಗಳೂರು: ಉದ್ಯೋಗ ಖಾತ್ರಿ ಯೋಜನೆಯ ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್(NMMS) ಹಾಜರಾತಿಯಲ್ಲಿ ವ್ಯತ್ಯಾಸವಾದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣ ಅಭಿವೃದ್ಧಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಾಗಿ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಆಯುಕ್ತರು ಪತ್ರ ಬರೆದಿದ್ದಾರೆ. ನರೇಗಾ ಹಾಜರಾತಿಯಲ್ಲಿ ಲೋಪ ದೋಷ ಉಂಟಾಗುತ್ತಿದೆ ಎಂದು ಗ್ರಾಮೀಣ ಅಭಿವೃದ್ಧಿ ಆಯುಕ್ತಾಲಯಕ್ಕೆ ದೂರು ಸಲ್ಲಿಕೆಯಾಗುತ್ತಿವೆ ಎಂದು ತಿಳಿಸಿದ್ದಾರೆ.
ಹಾಜರಾತಿಯಲ್ಲಿ ಹಾಜರಾದ ಕೂಲಿಕಾರರ ಸಂಖ್ಯೆ ಹಾಗೂ ಫೋಟೋದಲ್ಲಿರುವ ಕೂಲಿಕಾರರ ಸಂಖ್ಯೆಗೂ ವ್ಯತ್ಯಾಸವಿರುವುದು ಕಂಡುಬಂದಿದೆ. ಹೀಗಾಗಿ ಇನ್ನು ಮುಂದೆ ಎನ್ಎಂಎಂಎಸ್ ಹಾಜರಾತಿಯಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿದ ದೂರು ಪರಿಶೀಲಿಸಿ ಅಕ್ರಮ ಸಾಬೀತಾದಲ್ಲಿ ತಪ್ಪಿತಸ್ಥ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.