
ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಸ್ಥಿರ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಉದ್ದೇಶದಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವರ್ತುಲ ಆರ್ಥಿಕತೆ (ಸರ್ಕ್ಯುಲರ್ ಎಕಾನಮಿ) ಮಾದರಿಯನ್ನು ಜಾರಿಗೆ ತರಲು ನಮ್ಮ ಸರ್ಕಾರವು ಸಿದ್ದತೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತ್ಯಾಜ್ಯದ ನಿರ್ವಹಣೆಯ ಹೊಣೆಗಾರಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ನಮ್ಮ ಗ್ರಾಮ ಪಂಚಾಯಿತಿಗಳನ್ನು ಸ್ವಾವಲಂಭಿಯಾಗಿಸುವುದು ಇದರ ಉದ್ದೇಶವಾಗಿದೆ.
ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ರಾಜ್ಯದಲ್ಲಿ ಅಳವಡಿಸಿಕೊಂಡಿರುವ ವರ್ತುಲ ಆರ್ಥಿಕತೆಯ ಮಾದರಿಯನ್ನು ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪಂಚಾಯಿತಿ ಮಟ್ಟದಲ್ಲಿ ಕೇಂದ್ರೀಕೃತ ತ್ಯಾಜ್ಯ ಸಂಗ್ರಹಣೆ ಕೇಂದ್ರ ಸ್ಥಾಪನೆ ಮಾಡಲಿದ್ದು, ಮರುಬಳಕೆಗೆ ತಕ್ಕಂತೆ ವಿಂಗಡಣೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾಮಾಜಿಕ ಸುರಕ್ಷತೆ, ಕೆಲಸಗಾರರಿಗೆ ಆರೋಗ್ಯದ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಮರುಬಳಕೆ ಮೂಲಕ ಆರ್ಥಿಕತೆ ವೃದ್ಧಿ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರತ್ಯೇಕ ನೀತಿ ರೂಪಿಸಲಾಗುವುದು. ಇದಕ್ಕಾಗಿ ತಜ್ಞರ ಸಮಿತಿ ರಚಿಸಿದ್ದು, ಈ ತಿಂಗಳಲ್ಲೇ ಕರಡು ಸಿದ್ಧವಾಗಲಿದೆ ಎಂದು ಹೇಳಲಾಗಿದೆ.