ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ ಮುಖ್ಯ ಮಾಹಿತಿ ಇಲ್ಲಿದೆ. ಜಲ ಜೀವನ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಜಲಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, 91.91 ಲಕ್ಷ ಗ್ರಾಮೀಣ ಕುಟುಂಬಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕಿಸಲಾಗಿದೆ. 2021 -22ರಲ್ಲಿ 25.17 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವ ಗುರಿಯನ್ನು ಕಾಲಮಿತಿಯೊಳಗೆ ಸಾಧಿಸಬೇಕು ಎಂದು ತಿಳಿಸಿದ್ದಾರೆ.
435 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿದ್ದು, 69 ಯೋಜನೆ ಪ್ರಗತಿಯಲ್ಲಿದೆ. 30 ಯೋಜನೆಗೆ ಅನುಮತಿ ನೀಡಲಾಗಿದ್ದು, 161 ಯೋಜನೆಗಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್.ಡಿ.ಪಿ.ಆರ್. ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಇದ್ದರು.