ನವದೆಹಲಿ: ಉಕ್ರೇನ್ ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ನಲ್ಲಿ ರಷ್ಯಾದ ಶೆಲ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ರಾಜ್ಯದ ಹಾವೇರಿಯ ನವೀನ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಮಾಹಿತಿ ನೀಡಿದೆ.
ನವೀನ್ ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಮಂಗಳವಾರ ಬೆಳಗ್ಗೆ 8 ಗಂಟೆಗೆ(IST) ಖಾರ್ಕಿವ್ ನಲ್ಲಿರುವ ರಾಜ್ಯ ಆಡಳಿತ ಕಟ್ಟಡವನ್ನು ಗುರಿಯಾಗಿಸಿಕೊಂಡು ನಡೆದ ಕ್ಷಿಪಣಿ ದಾಳಿಯಲ್ಲಿ ಅವರು ಕೊಲ್ಲಲ್ಪಟ್ಟರು.
ನವೀನ್ ತಂದೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು, ಈ ವಿಷಯವನ್ನು ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇಂದು ಬೆಳಿಗ್ಗೆ ಖಾರ್ಕಿವ್ ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ನಾವು ಕುಟುಂಬಕ್ಕೆ ಸಂತಾಪ ತಿಳಿಸುತ್ತೇವೆ ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.