
ಮಾಸ್ಕೋ: ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಐಗೊಂಡಿದ್ದಾರೆ.
ವಿದ್ಯಾರ್ಥಿ ರಷ್ಯಾದ ನಗರ ಪೆರ್ಮ್‌ನಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ. ಬಂದೂಕುಧಾರಿಯ ಉದ್ದೇಶದ ಬಗ್ಗೆ ಸ್ಪಷ್ಟತೆ ಇಲ್ಲವಾಗಿದೆ.
ಗಾಬರಿಗೊಂಡ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ವಿಶ್ವವಿದ್ಯಾಲಯದ ಕಟ್ಟಡಗಳಿಂದ ಜಿಗಿಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ದಾಳಿ ನಡೆಸಿದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಭದ್ರತೆ ಮತ್ತು ಕಾನೂನು ಜಾರಿ ಸಂಸ್ಥೆಗಳು ಕ್ಯಾಂಪಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 1,100 ಕಿಲೋಮೀಟರ್(700 ಮೈಲಿ) ದೂರದಲ್ಲಿರುವ ಪೆರ್ಮ್ ಸುಮಾರು 1 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ವಿಶ್ವವಿದ್ಯಾನಿಲಯದಲ್ಲಿ ಸುಮಾರು 12,000 ವಿದ್ಯಾರ್ಥಿಗಳಿದ್ದಾರೆ.
ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ನಡೆದ ಭೀಕರ ದಾಳಿಯಿಂದ ಆಘಾತವಾಗಿದೆ ಎಂದು ರಷ್ಯಾದ ಭಾರತೀಯ ರಾಯಭಾರ ಕಚೇರಿ ಹೇಳಿದೆ.