ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ(ಪ್ರೌಢಶಾಲಾ ವಿಭಾಗ) ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವ್ಯಕ್ತಿಗಳಲ್ಲಿ ಅನೇಕರು ದೊಡ್ಡ-ದೊಡ್ಡ ಹುದ್ದೆಯನ್ನು ಅಲಂಕರಿಸಿದ್ದಾರೆ. ನಮ್ಮ ತಂದೆಯು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿ, ಅನೇಕ ಜನಪರ ಯೋಜನೆಯನ್ನು ಜಾರಿ ಮಾಡಿದ್ದಾರೆ. ಅದೇ ಹಾದಿಯಲ್ಲಿ ನಾನು ಕೂಡ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಶಿರಾಳಕೊಪ್ಪದಲ್ಲಿ ನೂತನವಾಗಿ ಸುಸಜ್ಜಿತವಾದ ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್) ಯನ್ನು ನಿರ್ಮಾಣ ಮಾಡಿ ಈ ಭಾಗದ ಜನರ ಬಹು ದಿನದ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.
ಈ ವೇಳೆ ಅನೇಕ ಗಣ್ಯರು, ಜನಪ್ರತಿನಿಧಿಗಳು ಹಾಗೂ ಶಾಲಾ- ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.