ಚಿಕ್ಕಮಗಳೂರು: ಧಾರಾಕಾರ ಮಳೆಯ ನಡುವೆಯೇ ಚಾರ್ಮಡಿ ಘಾಟ್ ನಲ್ಲಿ ಬರುತ್ತಿದ್ದ ಕಾರೊಂದು ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ನಡೆದಿದೆ.
ಕರಾವಳಿ, ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ.
ಇಂದು ಮುಂಜಾನೆ ಈ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಕಾರಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್ ಬಳಿ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ನಾಲ್ವರು ತಕ್ಷಣ ಕಾರಿನಿಂದ ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.