ಮಂಡ್ಯ: ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡಲು ಸಮ್ಮತಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮನವಿಗೆ ಸ್ಪಂದಿಸಿರುವ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 18 ಸಾವಿರ ರಾಜ್ಯ ಸರ್ಕಾರಿ ನೌಕರರಿದ್ದು, ಒಂದು ದಿನದ ವೇತನದಿಂದ ಸುಮಾರು ಮೂರರಿಂದ ನಾಲ್ಕು ಕೋಟಿ ರೂಪಾಯಿ ಸಂಗ್ರಹವಾಗಲಿದೆ.
ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ 25 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಆರಂಭದಲ್ಲಿ 30 ಕೋಟಿ ರೂ. ಅನುದಾನ ಘೋಷಿಸಲಾಗಿದ್ದರೂ 5 ಕೋಟಿ ರೂ. ಕಡಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೇರೆ ಮೂಲಗಳಿಂದ ಆರ್ಥಿಕ ಸಂಪನ್ಮೂಲ ಸಂಗ್ರಹಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಮಂಡ್ಯ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ, ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಸರ್ಕಾರಿ ನೌಕರರು, ಕೈಗಾರಿಕೆಗಳ ಮಾಲೀಕರು ಮತ್ತು ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ. ಇವರ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಒಂದು ದಿನದ ವೇತನ ಕಡಿತಗೊಳಿಸಲು ಸಮ್ಮತಿಸಿ ಜಿಲ್ಲಾಧಿಕಾರಿ ಅವರಿಗೆ ಒಪ್ಪಿಗೆ ಪತ್ರ ನೀಡಿದ್ದಾರೆ.