ಬೆಂಗಳೂರು: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸಕಾಲ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 500ಕ್ಕೂ ಹೆಚ್ಚಿನ ಸೇವೆಗಳನ್ನು ಹೊಸದಾಗಿ ಸಕಾಲ ಸೇವೆ ವ್ಯಾಪ್ತಿಗೆ ಸೇರ್ಪಡೆ ಮಾಡುವಂತೆ ತಿಳಿಸಿದ್ದಾರೆ.
ಪ್ರಸ್ತುತ ಸಕಾಲ ಅಡಿಯಲ್ಲಿ 100 ಇಲಾಖೆಗಳ 1201 ಸೇವೆಗಳು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಇದರೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಅದರ ಅಧೀನ ಇಲಾಖೆಗಳ 135 ಹೊಸ ಸೇವೆಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಅದರ ಅಧೀನ ಇಲಾಖೆಗಳ 63 ಸೇವೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 16 ಸೇವೆಗಳು ಸೇರಿದಂತೆ ಇತರೆ ಇಲಾಖೆಗಳ 500ಕ್ಕೂ ಹೆಚ್ಚು ಹೊಸ ಸೇವೆಗಳನ್ನು ಸಕಾಲ ಅಡಿಯಲ್ಲಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.