ಬೆಂಗಳೂರು: ಸಹಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಜುಲೈ 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು. ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿದ ಆಯೋಗ ಮಾರ್ಚ್ 16ರಂದು ವರದಿ ಸಲ್ಲಿಸಿದ್ದು, ಅಂದಿನಿಂದಲೇ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣ ವೇತನ ಪರಿಷ್ಕರಣೆ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ವೇತನ ಆಯೋಗ ಶೇಕಡ 31 ರಷ್ಟು ತುಟ್ಟಿ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜೊತೆಗೆ ಶೇಕಡ 27.50 ರಷ್ಟು ಫಿಟ್ ಮೆಂಟ್ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.