ಧಾರವಾಡ: ಶಿವಮೊಗ್ಗ, ಚಿಕ್ಕಬಳ್ಳಾಪುರದಲ್ಲಿ ನಡೆದ ಅವಘಡಗಳ ನಂತರ ಹೊಸ ನಿಯಮ ಜಾರಿಗೆ ತರಲಾಗಿದ್ದು, ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಸ್ಪೋಟಕ ಬಳಸಲು ತಿಳಿಸಲಾಗಿದೆ. ಇದರ ಹೊರತಾಗಿ ಬೇರೆಯವರು ಸ್ಪೋಟಕ ಬಳಸದಂತೆ ಕಾನೂನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 30 ದಿನಗಳ ಒಳಗೆ ಆನ್ಲೈನ್ ಮತ್ತು ಆಫ್ಲೈನ್ ವ್ಯವಸ್ಥೆಯಡಿ ಗಣಿಗಾರಿಕೆ ಲೈಸೆನ್ಸ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಗಣಿಗಾರಿಕೆ ಅನುಮತಿ ಪಡೆಯುವ ನಿಯಮವನ್ನು ಸರಳಿಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಅದಿರು ಬಳಕೆ ಮಾಡಲು ಚಿಂತನೆ ನಡೆಸಲಾಗಿದೆ. ದೊಡ್ಡ ಕಂಪನಿಗಳೊಂದಿಗೆ ಸಭೆ ನಡೆಸಿದ್ದು ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಗಣಿಗಾರಿಕೆ ನಡೆಸುವ ಬಗ್ಗೆ ಸ್ಕೂಲ್ ಆಫ್ ಮೈನಿಂಗ್ ತೆರೆಯುವ ಉದ್ದೇಶವಿದೆ. ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆ ತರುವುದು ನಮ್ಮ ಉದ್ದೇಶವಾಗಿದ್ದು, ಜನರಿಗೆ ಸುಲಭ ಮತ್ತು ಕಡಿಮೆ ದರದಲ್ಲಿ ಮರಳು ಸಿಗಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.